ಮುಖ್ಯ ವಿಷಯಕ್ಕೆ ತೆರಳಿ
ನಾದಫ್ ಸಾರಥ್ಯದಲ್ಲಿ ಹೊಸಬೆಳಕು

ರಾಜ್ಯದಲ್ಲಿ ವೈಜ್ಞಾನಿಕವಲ್ಲದ ಬೆಲೆ ಏರಿಕೆ ಖಂಡಿಸಿ ಇದೇ 11ಕ್ಕೆ ಬಿಜೆಪಿ ಬೃಹತ್ ಪ್ರತಿಭಟನೆ: ಬಿ. ವೈ. ವಿಜಯೇಂದ್ರ ಆಕ್ರೋಶ

ಬರಹ: ಎಂ. ಎನ್. ನದಾಫ್1 ನಿಮಿಷ ಓದು

ಬೆಂಗಳೂರು: ರಾಜ್ಯದ ಜನತೆ ಸಂತೋಷದಿಂದ ದೀಪಾವಳಿ ಹಬ್ಬ ಆಚರಿಸುವ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ನಿರ್ಮಿಸಿಲ್ಲ. ಬಡವರು, ರೈತರು ಸೇರಿದಂತೆ ಜನಸಾಮಾನ್ಯರು ಬೆಲೆ ಏರಿಕೆಯಿಂದ ಕಂಗಾಲಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ದೂರಿದ್ದಾರೆ.

ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಳೆದ ಮೂರು ವರ್ಷಗಳ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ, ಮದ್ಯದ ದರ ಏರಿಕೆ, ನೀರಿನ ದರ ಹೆಚ್ಚಳ, ವನ್ಯಜೀವಿ ಸಫಾರಿ ಟಿಕೆಟ್ ದರ ಹೆಚ್ಚಳ, ಸರ್ಕಾರಿ ಆಸ್ಪತ್ರೆಗಳ ಎಕ್ಸ್‌ರೇ ಮತ್ತು ಹೊರರೋಗಿಗಳ ಸಮಾಲೋಚನಾ ಶುಲ್ಕ ಹೆಚ್ಚಳ ಹೀಗೆ ಜನಸಾಮಾನ್ಯರ ಮೇಲೆ ಒಂದರ ಹಿಂದೆ ಒಂದರಂತೆ ಹೊರೆ ಹಾಕಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಇದೀಗ ಹಾಲು, ಮೊಸರು, ತುಪ್ಪ ಹಾಗೂ ಬಸ್ ಪ್ರಯಾಣ ದರ ಹೆಚ್ಚಳದ ಮೂಲಕ ಜನರ ಬದುಕನ್ನು ಮತ್ತಷ್ಟು ದುಸ್ತರಗೊಳಿಸಲಾಗಿದೆ ಎಂದು ಅವರು ಟೀಕಿಸಿದರು.

ಕೆಎಸ್‌ಆರ್‌ಟಿಸಿ ಸೇರಿದಂತೆ ಸಾರಿಗೆ ನಿಗಮಗಳ ಬಸ್ ಪ್ರಯಾಣ ದರವನ್ನು ಶೇಕಡ 40ರಿಂದ 50ರಷ್ಟು ಹೆಚ್ಚಿಸುವುದಾಗಿ ಸರ್ಕಾರ ಹೇಳುತ್ತಿದೆ. ಆದರೆ ಹಲವು ಕಡೆಗಳಲ್ಲಿ ಪ್ರಯಾಣಿಕರ ಮೇಲೆ ಶೇಕಡ 70ರಿಂದ 80ರವರೆಗೆ ಹೊರೆ ಬೀಳುತ್ತಿದೆ. ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಪ್ರಯಾಣದ ಸೌಲಭ್ಯ ನೀಡಿರುವ ಸರ್ಕಾರ, ಸಾರಿಗೆ ನಿಗಮಗಳಿಗೆ ಪಾವತಿಸಬೇಕಾದ ಸಾವಿರಾರು ಕೋಟಿ ರೂಪಾಯಿ ಬಾಕಿ ಉಳಿಸಿಕೊಂಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಸರ್ಕಾರದ ಅವೈಜ್ಞಾನಿಕ ಬೆಲೆ ಏರಿಕೆಯನ್ನು ಖಂಡಿಸಿ ಬಿಜೆಪಿ ವತಿಯಿಂದ ಇದೇ 11ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿಳಿಸಿದರು.

ಇನ್ನಷ್ಟು ಸುದ್ದಿಗಳು